ದುಷ್ಕರ್ಮಿಗಳಿಂದ ಗಾಂಧಿ ಪ್ರತಿಮೆ ಧ್ವಂಸ

ಶಿವಮೊಗ್ಗ: ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಮಾಡಲಾಗಿದೆ. ಪಟ್ಟಣದ ಮುಖ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಂಧಿ ಪ್ರತಿಮೆಯನ್ನು ಹಾಳು ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗಾಂಧಿ ಪ್ರತಿಮೆಗೆ ಹಾನಿಗೊಳಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಹೊಳೆಹೊನ್ನೂರಿಗೆ ದೌಡಾಯಿಸಿ ಪ್ರತಿಭಟನೆ ನಡೆಸಿದರು. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಮಿಥುನ್ ಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ. ತನಿಖೆ ಮುಂದುವರಿದಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪರಿಸ್ಥಿತಿ ತಿಳಿಯಾಗಿದೆ.