ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಜೆಸಿಟಿಯು ಕಿಡಿ

ಶಿವಮೊಗ್ಗ: ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಡಿಸಿ ಕಚೇರಿ ಎದುರು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು) ಪ್ರತಿಭಟನೆ ನಡೆಸಿತು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದು ಒಂಭತ್ತು ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಕಾರ್ಮಿಕರ, ರೈತರ, ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗಿದೆ. ನಿರುದ್ಯೋಗ ಹೆಚ್ಚಿದೆ. ಹಸಿವಿನ ಸೂಚ್ಯಂಕ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆ ಸಾರ್ವಜನಿಕ ಉದ್ದಿಮೆಗಳನ್ನು ಬಿಡಿಗಾಸಿಗೆ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖಾಸಗಿ ಕಂಪೆನಿಗಳು ಕೂಡ ದೊಡ್ಡ ಸಂಖೆಯಲ್ಲಿ ನೌಕರರನ್ನು ವಜ ಗೊಳಿಸುತ್ತಿವೆ. ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಂಡು ಅವರಿಗೆ ಯಾವುದೇ ಸೌಲಭ್ಯ ನೀಡದೆ ಕನಿಷ್ಠ ವೇತನವನ್ನೂ ಕೊಡದೆ ವಂಚಿಸುತ್ತಿವೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಬಿದ್ದಿದ್ದರೂ ಕೂಡ ಕಾರ್ಪೊರೇಟ್ ಗಳಿಗೆ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ದೂರಿದರು.
ರೈತರ ಸಮಸ್ಯೆಗಳು ಕೂಡ ಹಾಗೆಯೇ ಇವೆ. ರೈತರ ನಿರಂತರ ಹೋರಾಟಕ್ಕೆ ಮಣಿದಂತೆ ಮಾಡಿದ ಕೇಂದ್ರ ಸರ್ಕಾರ ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದು ನಂಬಿಕೆ ದ್ರೋಹ ಮಾಡುತ್ತಿದೆ. ಖಾಸಗಿ ಯವರಿಗೆ ಸಹಾಯ ಮಾಡಲೆಂದೇ ದುಡಿತದ ಅವಧಿಯನ್ನು ೧೨ ಗಂಟೆಗೆ ಹೆಚ್ಚಿಸಿದೆ. ಹಲವು ಕಾರ್ಮಿಕ ಕಾಯಿದೆಗಳನ್ನು ರದ್ದುಪಡಿಸಿದೆ ಎಂದು ಆರೋಪಿಸಿದರು.
ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದಾಗಬೇಕು. ಕನಿಷ್ಠ ವೇತನ ತಿಂಗಳಿಗೆ ೩೧,೫೦೦ ರೂ. ನೀಡಬೇಕು. ದುಡಿತದ ಅವಧಿಯನ್ನು ಕಡಿಮೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯ ದಿನಗಳನ್ನು ಹೆಚ್ಚಿಸಬೇಕು. ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತರಿಗೆ ಕನಿಷ್ಠ ವೇತನ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮ ಗಳನ್ನು ಜರಿಗೊಳಿಸ ಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಮತ್ತು ಜಿಎಸ್‌ಟಿಯಿಂದ ಹೊರಗಿಡಬೇಕು. ವಿದ್ಯುತ್ ಮಸೂದೆ ಹಿಂಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಪ್ರಮುಖರಾದ ಲಿಂಗೋಜಿರಾವ್, ಕುಮಾರಸ್ವಾಮಿ, ಹನುಮಮ್ಮ, ಬಂಗಾರಪ್ಪ, ಲಕ್ಷ್ಮೀನಾರಾಯಣ, ಪ್ರಭಾಕರ್, ಮುನಿರಾಜ್, ನಾರಾಯಣ ಇನ್ನಿತರರು ಪಾಲ್ಗೊಂಡಿದ್ದರು.